Karnataka
oi-Mallika P
ಬೆಂಗಳೂರು, ಜೂ. 23: ಪಂಚಮಸಾಲಿ ಸಮುದಾಯವನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡುವ ಬಗ್ಗೆ ಬಜೆಟ್ ಅಧಿವೇಶನದ ನಂತರ ಕಾನೂನು ಹಾಗೂ ಸಂವಿಧಾನ ತಜ್ಞರೊಂದಿಗೆ ಸಭೆ ಕರೆದು ಸಂವಿಧಾನಾತ್ಮಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಪಂಚಮಸಾಲಿ ಸಮುದಾಯವನ್ನು ರಾಜ್ಯ 2ಎ ಪಟ್ಟಿಗೆ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರಿಸಲು ಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಪಂಚಮಸಾಲಿ ಶಾಸಕರ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿದಲ್ಲಿ ಅವರು ಕೂಡ ಮುಖ್ಯ ವಾಹಿನಿಗೆ ಬರಲು ಅನುಕೂಲವಾಗುತ್ತದೆ ಎಂದು ಸ್ವಾಮೀಜಿ ತಿಳಿಸಿದರು.
Rahul Gandhi: ರಾಹುಲ್ ಕಾರ್ಯಕ್ರಮದಲ್ಲಿ ಪಂಚಮಸಾಲಿ ಸ್ವಾಮೀಜಿಗಳು: ಸಮುದಾಯಕ್ಕೆ ಪರೋಕ್ಷ ಸಂದೇಶ ರವಾನೆ? ಇನ್‌ಸೈಡ್ ಸ್ಟೋರಿ
ಹಿಂದಿನ ಸರ್ಕಾರ ಮೀಸಲಾತಿ ವಿಚಾರದಲ್ಲಿ ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಗೊಂದಲ ಸೃಷ್ಟಿಸಿದೆ. ಮೂಗಿಗೆ ತುಪ್ಪ ಸವರುವ ಬದಲು ಹಣೆಗೆ ತುಪ್ಪ ಸವರಿದೆ ಎಂದ ಮುಖ್ಯಮಂತ್ರಿಗಳು, ಮೀಸಲಾತಿ ವಿಚಾರವಾಗಿ ಆತುರದ ನಿರ್ಧಾರ ಸಲ್ಲದು. ಸಂವಿಧಾನಾತ್ಮಕ ಹಾಗೂ ಕಾನೂನಿನ ಚೌಕಟ್ಟಿನಲ್ಲಿ ತೀರ್ಮಾನ ಮಾಡಬೇಕು. ಹಾಗಾಗಿ ಸಭೆ ಕರೆದು ಕೂಲಂಕುಷವಾಗಿ ಚರ್ಚಿಸಲಾಗುವುದು ಎಂದರು.
ಮುಖ್ಯಮಂತ್ರಿಗಳ ಮಾತಿಗೆ ಪ್ರತಿಕ್ರಿಯಿಸಿದ ಶಾಸಕ ವಿನಯ್ ಕುಲಕರ್ಣಿ, ಮುಸ್ಲಿಂ ಸಮುದಾಯದ ಪಾಲಿನ ಮೀಸಲಾತಿಯನ್ನು ಕಿತ್ತು ಕೊಟ್ಟಿದ್ದನ್ನು ನಾವುಗಳು ಅವತ್ತೇ ವಿರೋಧಿಸಿದ್ದೆವು ಎಂದರು.
ಚರ್ಚೆ ವೇಳೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು, “ನುಡಿದಂತೆ ನಡೆದ ಮುಖ್ಯಮಂತ್ರಿಗಳು ನೀವು. ಬಸವಣ್ಣ ಅವರ ಭಾವಚಿತ್ರವನ್ನು ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದವರು, ರಾಣಿ ಚನ್ನಮ್ಮ ಜಯಂತಿಯನ್ನು ಮೊದಲಬಾರಿಗೆ ಆಚರಿಸಿದವರು ಎಂದು ಜಯಮೃತ್ಯುಂಜಯ ಸ್ವಾಮಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಮೀಸಲಾತಿ ವಿಚಾರದಲ್ಲಿ ಕಾಟಾಚಾರ ಮಾಡಲ್ಲ
ಕಾಟಾಚಾರಕ್ಕಾಗಿ ಮೀಸಲಾತಿ ಕೊಡಬಾರದು. ಬಿಜೆಪಿಗೆ ಮೀಸಲಾತಿ ಕೊಡುವುದು ಬೇಕಾಗಿರಲಿಲ್ಲ. ಅದಕ್ಕೆ ನ್ಯಾಯಾಲಯಕ್ಕೆ ಹೋದರೆ ಬಿದ್ದೋಗುವ ರೀತಿಯಲ್ಲಿ ಕಾಟಾಚಾರಕ್ಕೆ ಕೊಟ್ಟರು. ಇದರಿಂದ ಗೊಂದಲ ಸೃಷ್ಟಿಯಾಗಿದೆ. ಸಂವಿಧಾನ ತಜ್ಞರ ಜತೆ ಚರ್ಚಿಸಿ ಗೊಂದಲ ಬಗೆಹರಿಸಬೇಕಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿರು.
ಸಭೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಸಮುದಾಯದ 15 ಮಂದಿ ಶಾಸಕರು ಹಾಗೂ ಪಂಚಮಸಾಲಿ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.
English summary
Panchamasali MLAs and Jaya Mrityunjaya Swamiji met Chief Minister Siddaramaiah today for reservation. Know more
Story first published: Friday, June 23, 2023, 16:53 [IST]