Karnataka
oi-Gururaj S
ಬೆಂಗಳೂರು, ಜೂನ್ 19; ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಶರಣರು ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಶಿವಮೂರ್ತಿ ಶರಣರನ್ನು ಪೊಲೀಸರು 2022ರ ಸೆಪ್ಟೆಂಬರ್ 1ರಂದು ಬಂಧಿಸಿದ್ದರು.
ಸೋಮವಾರ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬಂದಿತ್ತು. ಶಿವಮೂರ್ತಿ ಶರಣರ ಪರವಾಗಿ ವಕೀಲ ಸಂದೀಪ್ ಎಸ್. ಪಾಟೀಲ ವಿಚಾರಣೆಗೆ ಹಾಜರಾಗಿದ್ದರು.
Breaking; ಮುರುಘಾ ಮಠದ ಆಡಳಿತಾಧಿಕಾರಿ ನೇಮಕ ರದ್ದು
ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಆರೋಪ ಪಟ್ಟಿ ಸಲ್ಲಿಕೆಯಾಗುವುದಕ್ಕೂ ಮೊದಲು ಅರ್ಜಿದಾರರು ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ವಿಚಾರಣೆ ಹಂತದಲ್ಲಿಯೇ ಅರ್ಜಿಯವನ್ನು ವಾಪಸ್ ಪಡೆಯಲಾಗಿತ್ತು ಎಂದು ಹೇಳಿತು.
ಮುರುಘಾ ಮಠದಲ್ಲಿ ಸರಣಿ ಅಪರಾಧ ಕೃತ್ಯ: ಹೈಕೋರ್ಟ್‌ಗೆ ಹೇಳಿಕೆ
ಈಗ ಅರ್ಜಿದಾರರು ಮತ್ತೆ ಜಾಮೀನು ಕೋರಿದ್ದಾರೆ. ಈ ಅರ್ಜಿಯನ್ನು ಈ ಹಿಂದೆ ವಿಚಾರಣೆ ನಡೆಸಿರುವ ಪೀಠವೇ ವಿಚಾರಣೆ ನಡೆಸುವುದು ಸೂಕ್ತ. ಈ ನಿಟ್ಟಿನಲ್ಲಿ ರಿಜಿಸ್ಟ್ರಿಯೂ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿತು. ಮುಖ್ಯ ನ್ಯಾಯಮೂರ್ತಿಗಳ ಪೀಠ ಯಾವ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಬೇಕು ಎಂದು ತೀರ್ಮಾನ ಮಾಡಲಿದೆ.
ಮುರುಘಾ ಮಠದ ಆಸ್ತಿ; ಹೈಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರದ ವಾದವೇನು?
ಅರ್ಜಿದಾರರ ವಾದ; ಅರ್ಜಿಯ ವಿಚಾರಣೆ ವೇಳೆ ಶಿವಮೂರ್ತಿ ಶರಣರ ಪರವಾಗಿ ವಕೀಲ ಸಂದೀಪ್ ಎಸ್. ಪಾಟೀಲ ವಾದ ಮಂಡಿಸಿ, ಈ ಹಿಂದೆ ಜಾಮೀನು ಕೋರಲಾಗಿತ್ತು. ಕಾರಣಾಂತರಗಳಿಂದ ಅರ್ಜಿ ವಾಪಸ್ ಪಡೆಯಲಾಗಿತ್ತು. ಈಗ ಆರೋಪಪಟ್ಟಿ ಸಲ್ಲಿಕೆಯಾಗಿದ್ದು, ಜಾಮೀನು ಅರ್ಜಿ ಪುರಸ್ಕರಿಸಬೇಕು ಎಂದು ಮನವಿ ಮಾಡಿದರು.
ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಶಿವಮೂರ್ತಿ ಶರಣರನ್ನು ಪೊಲೀಸರು 2022ರ ಸೆಪ್ಟೆಂಬರ್ 1ರಂದು ಬಂಧಿಸಿದ್ದು ಅಂದಿನಿಂದಲೂ ಅವರು ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರು ಸಲ್ಲಿಕೆ ಮಾಡಿದ್ದ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ವಜಾಗೊಳಿಸಿತ್ತು.
ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ), ಅತ್ಯಾಚಾರ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ ಗುರುತರ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಕರಣದ ತನಿಖೆ ನಡೆಸಿರುವ ಪೊಲೀಸ್ ಅಧಿಕಾರಿಗಳು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆಯನ್ನೂ ಸೇರ್ಪಡೆ ಮಾಡಿದ್ದರು.
ಶಿವಮೂರ್ತಿ ಶರಣ ಬಂಧನವಾದ ಬಳಿಕ ಮಠದ ಉಸ್ತುವಾರಿ ನೋಡಿಕೊಳ್ಳಲು ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿತ್ತು. ಕರ್ನಾಟಕ ಹೈಕೋರ್ಟ್ ಕೆಲವು ದಿನಗಳ ಹಿಂದೆ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸಿ ಆದೇಶ ಹೊರಡಿಸಿತ್ತು.
ಈ ವರ್ಷದ ಫೆಬ್ರವರಿಯಲ್ಲಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 761 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. 73 ಸಾಕ್ಷ್ಯಗಳನ್ನು ಉಲ್ಲೇಖಿಸಲಾಗಿದ್ದು, ನಾಲ್ವರು ಸಂತ್ರಸ್ತ ವಿದ್ಯಾರ್ಥಿನಿಯರ ಪೈಕಿ ಇಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ಉಲ್ಲೇಖಿಸಲಾಗಿದೆ.
English summary
Shivamurthy Murugha Sharanaru of Chitradurga Murugha mutt moved Karnataka high court for bail. He arrested on charges of POCSO case.