Karnataka
oi-Ravindra Gangal

ಬೆಂಗಳೂರು, ಜೂನ್ 20: ಕರ್ನಾಟಕದ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ನೀಡಿದೆ. ಮುಂಗಾರು ಋತುವಿನ ಆರಂಭವಾದ ಬೆನ್ನಲ್ಲೇ ತಮಿಳುನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಕರ್ನಾಟಕದಾದ್ಯಂತ ಸಾಧಾರಣ ಮಳೆ ಸುರಿಯುವ ಬಗ್ಗೆಯೂ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಗುರುವಾರದ ವರೆಗೆ ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತನ್ನ ದೈನಂದಿನ ಬುಲೆಟಿನ್‌ನಲ್ಲಿ ತಿಳಿಸಿದೆ.

ಗುಡುಗು ಹಾಗೂ ಬಿರುಗಾಳಿ ಸಹಿತ ಮಳೆಯನ್ನು ಕರಾವಳಿ ಭಾಗಗಳಲ್ಲಿ ನಿರೀಕ್ಷಿಸಬಹುದು ಎಂದು ತಿಳಿದುಬಂದಿದೆ. ಇದು ಪ್ರತ್ಯೇಕ ಸ್ಥಳಗಳಲ್ಲಿ ಸಂಭವಿಸುವ ಸಾಧ್ಯತೆ ಇದ್ದು, ಕರ್ನಾಟಕದ ಒಳ ಭಾಗಗಳಲ್ಲಿ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ ಇರಲಿದೆ. ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
ಗುರುವಾರದ ವರೆಗೆ ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ನಾಲ್ಕರಿಂದ ಐದು ಡಿಗ್ರಿ ಸೆಲ್ಸಿಯಸ್ ಮತ್ತು ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಮೂರರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಬುಧವಾರದವರೆಗೆ ಕರ್ನಾಟಕ ಕರಾವಳಿಯಲ್ಲಿ 45 ಕಿಮೀ ರಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಮೀನುಗಾರಿಕಾ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
‘ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ’ ಎಂದು ಹವಾಮಾನ ಇಲಾಖೆ ತನ್ನ ಬುಲೆಟಿನ್‌ನಲ್ಲಿ ತಿಳಿಸಿದೆ.
Bengaluru Rain: ಬೆಳಗ್ಗೆಯೇ ಬೆಂಗಳೂರು, ಕೋಲಾರದಲ್ಲಿ ಮಳೆ ಅಬ್ಬರ : ಭಾರಿ ಮಳೆ ಮುನ್ಸೂಚನೆ
ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ, ಮುಂದಿನ ಎರಡು ದಿನಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

‘ಮೇಲ್ಮೈ ಗಾಳಿ ಕೆಲವೊಮ್ಮೆ ಬಲವಾಗಿರಬಹುದು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್ ಆಗಿರಬಹುದು’ ಎಂದು ಅದು ಹೇಳಿದೆ.
ಭಾರೀ ಮಳೆಯ ಎಚ್ಚರಿಕೆಯ ದೃಷ್ಟಿಯಿಂದ ತಿರುಪತ್ತೂರ್ ಮತ್ತು ತಿರುವಣ್ಣಾಮಲೈ ಸೇರಿದಂತೆ ನೆರೆಯ ತಮಿಳುನಾಡಿನ ಕೆಲವು ಭಾಗಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ರಾಜ್ಯದ ಕೆಲವು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆಯನ್ನು ನೀಡಲಾಗಿದೆ.
ಪ್ರತಿಕೂಲ ಹವಾಮಾನದಿಂದಾಗಿ ಚೆನ್ನೈಗೆ ತೆರಳುವ ಕನಿಷ್ಠ 10 ವಿಮಾನಗಳನ್ನು ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ತಿರುಗಿಸಲು ಅಧಿಕಾರಿಗಳು ಒತ್ತಾಯಿಸಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ದೋಹಾ, ಅಬುಧಾಬಿ, ಲಂಡನ್, ಶಾರ್ಜಾ, ಕೊಲಂಬೊ, ಸಿಂಗಾಪುರ, ಮಸ್ಕತ್ ಮತ್ತು ದುಬೈನಿಂದ ಬಂದಿರುವ ಅಂತಾರಾಷ್ಟ್ರೀಯ ವಿಮಾನಗಳನ್ನು ಬೆಂಗಳೂರಿಗೆ ತಿರುಗಿಸಲಾಗಿದೆ.
English summary
IMD Issued thunderstorm rain alert in Coastal Regions of Karnataka Soon after Heavy Rains several parts of Tamil Nadu | Explore which areas are given alert in Coastal Karnataka
Story first published: Tuesday, June 20, 2023, 13:55 [IST]