Last Updated:
ಬೆಂಗಳೂರು, ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮುಂದಿನ ವಾರ 40-43 ಡಿಗ್ರಿ ಉಷ್ಣಾಂಶ ಸಾಧ್ಯ ಇದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಮೇತ ಹಗುರ ಮಳೆ, ಗಾಳಿ 30-40 ಕಿ.ಮೀ ವೇಗ ತಜ್ಞರಿಂದ ಎಚ್ಚರಿಕೆ ಬಿಡುಗಡೆಯಾಗಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru Summer) ಈ ವರ್ಷ ಬೇಸಿಗೆಯ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಸಾಮಾನ್ಯ ಉಷ್ಣಾಂಶಕ್ಕಿಂತ 2-3 ಡಿಗ್ರಿ ಹೆಚ್ಚು ದಾಖಲಾಗುತ್ತಿದೆ. ಅದರಲ್ಲೂ ಮಧ್ಯಾಹ್ನದ ಅವಧಿಯಲ್ಲಿ ಯುವಿ ಕಿರಣಗಳ ಪ್ರಭಾವವೂ ಹೆಚ್ಚಾಗಿದ್ದು, ತಜ್ಞರು ಎಚ್ಚರಿಕೆ (IMD Alert) ವಹಿಸುವಂತೆ ಸೂಚನೆ ನೀಡಿದ್ದಾರೆ. ಇದರ ನಡುವೆಯೇ ಮತ್ತೊಂದು ಆಘಾತಕಾರಿ ವರದಿ ಹೊರಬಂದಿದ್ದು, ಮುಂದಿನ ವಾರ ಉಷ್ಣಾಂಶ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಎಚ್ಚರಿಕೆಯನ್ನು (Weather Forecast) ನೀಡಿದೆ.
ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಸಿ.ಎಸ್. ಪಾಟೀಲ್ (Scientist CS Patil) ಅವರು ಮುಂದಿನ ಏಳು ದಿನಗಳ ಹವಾಮಾನ ವರದಿಯ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇಂದು ರಾಜ್ಯದ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್, ಬೀದರ್‌ನಲ್ಲಿ 43 ಡಿಗ್ರಿ ಸೆಲ್ಸಿಯಸ್, ವಿಜಯಪುರ 40 ಡಿಗ್ರಿ ಸೆಲ್ಸಿಯಸ್, ರಾಯಚೂರಿನಲ್ಲಿ 41 ಡಿಗ್ರಿ ಸೆಲ್ಸಿಯಸ್, ಬೆಂಗಳೂರು 34 ಡಿಗ್ರಿ ಸೆಲ್ಸಿಯಸ್, ಕಾರವಾರದಲ್ಲಿ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ ಚಾಮರಾಜನಗರ, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ. ಈಗ ಇರೋ ಹವಾಮಾನ ಮುನ್ಸೂಚನೆ ನೋಡುವುದಾದರೆ, ಮೇ 03 ರಿಂದ ಮೇ 09ರ ವರೆಗೂ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಮೇತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವೂ ಪ್ರತಿಗಂಟೆಗೆ 30-40 ಕಿ.ಮೀ ವೇಗದಲ್ಲಿ ಇರಲಿದೆ.
ಬೆಂಗಳೂರಿನಲ್ಲಿ ಮುಂದಿನ ಒಂದು ವಾರ ಗರಿಷ್ಠ ಉಷ್ಣಾಂಶ 35-37 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದ್ದು, ಕರ್ನಾಟಕ ಒಳನಾಡಿನಲ್ಲಿ ಟ್ರಫ್ 0.9 ಕಿ.ಮೀ ಎತ್ತರದಲ್ಲಿದೆ. ಕೆಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಮಳೆಯ ಜೊತೆಗೆ ಗಾಳಿಯ ವೇಗ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.
ಇಂದಿನಿಂದ ಮೇ.9 ರ ತನಕ ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಜೊತೆಗೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40-42 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 36-38 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.
ಉಳಿದಂತೆ ಕರಾವಳಿ ಜಿಲ್ಲೆಗಳಲ್ಲಿ 35-37 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದ್ದು, ಚಿತ್ರದುರ್ಗ, ಬಳ್ಳಾರಿ, ವಿಜಯನಗರದಲ್ಲಿ ಗರಿಷ್ಠ ಉಷ್ಣಾಂಶ 38-40 ಡಿಗ್ರಿ ಸೆಲ್ಸಿಯಸ್ಗೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇನ್ನು, ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿಂದು ಮಳೆಯ ಮುನ್ಸೂಚನೆ ನೀಡಲಾಗಿದೆ. ಚಾಮರಾಜನಗರ, ಮೈಸೂರು, ಬೆಳಗಾವಿ, ಕಲಬುರಗಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. (ವರದಿ: ಪ್ರಗತಿ ಶೆಟ್ಟಿ, ನ್ಯೂಸ್18 ಕನ್ನಡ, ಬೆಂಗಳೂರು)
Bangalore [Bangalore],Bangalore,Karnataka













