Karnataka
oi-Punith BU

ಬೆಂಗಳೂರು, ಜುಲೈ 7: ಈ ಬಾರಿಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಕಾರಣವಾಗಿರುವ ಗ್ಯಾರಂಟಿ ಯೋಜನೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಐತಿಹಾಸಿಕ 14ನೇ ಬಜೆಟ್‌ನಲ್ಲಿ ವಿವರಣೆ ನೀಡಿದ್ದಾರೆ. ನಾವು ಗ್ಯಾರಂಟಿ ಯೋಜನೆಗಳನ್ನು ಯಾಕೆ ಘೋಷಿಸಿದ್ದೇವೆ, ಯಾಕೆ ಜಾರಿಗೊಳಿಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳ ಅವು ಬಿಟ್ಟಿ ಕೊಡುಗೆಗಳಲ್ಲ. ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರ ಚಿಂತನೆಯಂತೆ ಈ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಭದ್ರತೆಯ ಖಾತರಿ ಕೊಡದ ಆರ್ಥಿಕ ಯೋಜನೆಯಿಂದ ಯಾವ ಉಪಯೋಗವೂ ಇಲ್ಲ. ಯೋಜನೆ ಒಪ್ಪಿತವಾಗಬೇಕಾದರೆ, ಅದು ಮಿತವ್ಯಯದ್ದು ಮತ್ತು ಸುಭದ್ರವು ಆಗಿರಬೇಕು. ಅದು ಮಿತವ್ಯಯದ್ದು ಆಗಿರದಿದ್ದರೆ, ಬಹುಶ: ನಡೆದೀತು. ಆದರೆ, ಸುಭದ್ರವಾಗಿಲ್ಲದಿದ್ದರೆ, ಖಂಡಿತ ನಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಮುಕ್ತ ಮಾರುಕಟ್ಟೆಯ ಈ ಯುಗದಲ್ಲಿ ಬಂಡವಾಳ ಹೂಡಿಕೆಯನ್ನು ವ್ಯಾಪಕವಾಗಿ ಆಕರ್ಷಿಸುವುದು, ಉದ್ಯೋಗಸಹಿತ ಬೆಳವಣಿಗೆಯನ್ನು ಸಾಕಾರಗೊಳಿಸುವುದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾದದ್ದು ಸಂಪತ್ತಿನ ವ್ಯಾಪಕ ಅಸಮಾನ ಹಂಚಿಕೆಯು ಸೃಷ್ಟಿಸುವ ಬೃಹತ್ ಕಂದರವು ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರದಂತೆ ನೋಡಿಕೊಳ್ಳುವುದಾಗಿದೆ. ಅಭಿವೃದ್ಧಿಯ ಫಲವನ್ನು ಬಡವರು, ಶೋಷಿತರು ಹಾಗೂ ದುರ್ಬಲ ವರ್ಗದವರಿಗೆ ಹಂಚುವ ನಮ್ಮ ಪ್ರಯತ್ನವಾಗಿದೆ ಎಂದು ಅವರು ತಮ್ಮ ಬಜೆಟ್‌ನಲ್ಲಿ ಹೇಳಿದ್ದಾರೆ.
ವಿಪಕ್ಷ ನಾಯಕ; ಕುರ್ಚಿ ಫೋಟೋದೊಂದಿಗೆ ಕಾಂಗ್ರೆಸ್ ಪ್ರಶ್ನೆ!
ಅಭಿವೃದ್ಧಿಯ ಸಾಹಿತ್ಯದಲ್ಲಿ ಆರ್ಥಿಕ ಪ್ರಗತಿಯ ಫಲಗಳು ಬಡವರಿಗೆ ಸಹಜವಾಗಿ ಹರಿದುಬರುತ್ತದೆ (trickle down theory) ಎಂಬ ನಂಬಿಕೆ ಹುಸಿಯಾದ ಸಂದರ್ಭದಲ್ಲಿ ಬಡವರಿಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಬೇಷರತ್ತಾಗಿ ನಗದು ವರ್ಗಾವಣೆ ಮಾಡುವುದು ಮಹಿಳಾ ಸಬಲೀಕರಣ ಹಾಗೂ ಅವರ ಖರೀದಿಸುವ ಸಾಮರ್ಥ್ಯ ಹೆಚ್ಚಿಸುವ ಪರಿಣಾಮಕಾರಿ ಮಾರ್ಗವೆಂಬುದು ಸಾಬೀತಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ನಮ್ಮ ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಿರುವ ಸಂಪನ್ಮೂಲವನ್ನು ನಮ್ಮ ಸರ್ಕಾರವು ಜನರಿಗೆ ಹೆಚ್ಚಿನ ಹೊರೆಯಾಗದಂತೆ ಹೊಂದಿಸಲಿದೆ.ಈ ನಿಟ್ಟಿನಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ತೆರಿಗೆ ಸೋರಿಕೆಯನ್ನು ತಡೆಗಟ್ಟುವುದರ ಜೊತೆಗೆ ಸರ್ಕಾರದ ಅನಗತ್ಯ ದುಂದುವೆಚ್ಚಗಳಿಗೆ ಕಡಿವಾಣ ಹಾಕಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಜ್ಯದ ಜನತೆ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದೆ. ಕೋವಿಡ್ 19 ರಿಂದಾಗಿ ಹಾಗೂ ಈ ಸಾಂಕ್ರಾಮಿಕದ ಸಂದರ್ಭದಲ್ಲಿ ಹಿಂದಿನ ಸರ್ಕಾರದ ಸಂವೇದನಾರಹಿತ ಕಾರ್ಯನಿರ್ವಹಣೆಯ ಪರಿಣಾಮ, ಒಪ್ಪತ್ತಿನ ಊಟಕ್ಕೂ ಸಂಚಕಾರ ಒದಗಿದ್ದು ಸುಳ್ಳಲ್ಲ. ದುಡಿಯುವ ಕೈಗಳಿಗೆ ಕೆಲಸ ತಪ್ಪಿದ್ದೂ ನೋಡಿದ್ದೇವೆ. ಉದ್ಯಮಗಳು ಮುಚ್ಚಿದ್ದರಿಂದ ಸಾವಿರಾರು ಕಾರ್ಮಿಕರು ನೌಕರಿ ಕಳೆದುಕೊಂಡು ಬೀದಿ ಪಾಲಾಗಬೇಕಾಯಿತು. ಹೀಗಾಗಿ ಗ್ಯಾರಂಟಿಗಳು ಅಗತ್ಯವಾಗಿವೆ ಎಂದು ಅವರು ತಿಳಿಸಿದ್ದಾರೆ.
ನಮ್ಮ ಸರ್ಕಾರವು ಬಡವರು, ದುರ್ಬಲ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಭೂ ರಹಿತ ಕೃಷಿ ಕಾರ್ಮಿಕರು ಮತ್ತು ಮಹಿಳೆಯರು ಸೇರಿದಂತೆ ಎಲ್ಲರಿಗೂ ಸಮಾನ ಅವಕಾಶ ಒದಗಿಸುವ ಮೂಲಕ ಎಲ್ಲರ ಕ್ಷೇಮಾಭಿವೃದ್ಧಿಯನ್ನು ಖಾತರಿಪಡಿಸಲು ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಒಂದು ವರ್ಷದಲ್ಲಿ ಸುಮಾರು 52,000 ಕೋಟಿ ರೂ.ಗಳನ್ನು ಅಂದಾಜು 1.30 ಕೋಟಿ ಕುಟುಂಬಗಳಿಗೆ ತಲುಪಿಸುವುದರಿಂದ ಪ್ರತೀ ಕುಟುಂಬಕ್ಕೆ ಮಾಸಿಕ 4,000 ರಿಂದ 5,000 ರೂ.ಗಳಷ್ಟು, ಅಂದರೆ, ವಾರ್ಷಿಕವಾಗಿ ಸರಾಸರಿ 48,000 ದಿಂದ 60,000 ರೂ.ಗಳಷ್ಟು ಹೆಚ್ಚುವರಿ ಆರ್ಥಿಕ ನೆರವು ನೀಡಿದಂತಾಗುತ್ತದೆ. ಇದು ಸಾರ್ವತ್ರಿಕ ಮೂಲ ಆದಾಯ (Universal basic income) ಎಂಬ ಪರಿಕಲ್ಪನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿಯ ಹೊಸ ಮಾದರಿಯನ್ನು ರೂಪಿಸುವ ಉದ್ದೇಶ ಹೊಂದಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
English summary
In his historic 14th budget, Chief Minister Siddaramaiah has explained the guarantee schemes which are the main reason for Congress’s victory in this assembly.