Last Updated:
ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಬಲ ವ್ಯಕ್ತಪಡಿಸಿರುವ ಸುದ್ದಿ ಗಮನ ಸೆಳೆದಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ (NEET Question Paper Leak Case) ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಇದರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಬೆಂಬಲ ವ್ಯಕ್ತಪಡಿಸಿರುವ ಸುದ್ದಿ ಗಮನ ಸೆಳೆದಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಉತ್ತಮ ಶಿಕ್ಷಣ ವ್ಯವಸ್ಥೆಗಾಗಿ ಧ್ವನಿ ಎತ್ತುತ್ತಿರುವ ವಿದ್ಯಾರ್ಥಿಗಳ ಈ ಪ್ರತಿಭಟನೆಗೆ ಹಲವು ವಲಯಗಳಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈ ಮಧ್ಯೆ, ಪ್ರತಿಭಟನೆಯ ಕೆಲ ಭಾಗಗಳಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾದ ಬಗ್ಗೆ ವರದಿಗಳು ಹೊರಬಂದಿವೆ.
ಈ ಬೆಳವಣಿಗೆಗಳ ನಡುವೆಯೇ ನಟ ಸಲ್ಮಾನ್ ಖಾನ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸುವ ಸಂದೇಶ ಹಂಚಿಕೊಂಡಿದ್ದಾರೆ.
ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದಿರುವುದು ನೋವು ತಂದಿದೆ ಎಂದು ಅವರು ಹೇಳಿದ್ದಾರೆ. ಪ್ರತಿಭಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅವರು, ಅವರೊಂದಿಗೆ ತಮ್ಮ ಸಹಾನುಭೂತಿ ಇದೆ ಎಂದು ತಿಳಿಸಿದ್ದಾರೆ.
ತಮ್ಮ ಸಂದೇಶದಲ್ಲಿ ಪೇಪರ್ ಲೀಕ್ ಪ್ರಕರಣವನ್ನು ಅತ್ಯಂತ ಗಂಭೀರ ವಿಷಯ ಎಂದು ಸಲ್ಮಾನ್ ಖಾನ್ ಉಲ್ಲೇಖಿಸಿದ್ದಾರೆ. ದೇಶದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ವ್ಯವಸ್ಥೆಗಾಗಿ ಒಗ್ಗಟ್ಟಿನಿಂದ ಹೋರಾಡುತ್ತಿರುವುದು ಸಂತೋಷದ ಸಂಗತಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ವಿದ್ಯಾರ್ಥಿಗಳಿಗೆ ಪೋಷಕರು ಸಹ ಬೆಂಬಲವಾಗಿ ನಿಂತಿರುವುದು ದೇಶದ ಭವಿಷ್ಯದ ದೃಷ್ಟಿಯಿಂದ ಉತ್ತಮ ಬೆಳವಣಿಗೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳು ತಮ್ಮ ಭವಿಷ್ಯ ಮತ್ತು ದೇಶದ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದಾರೆ. ಆದ್ದರಿಂದ ಈ ಚಳವಳಿಯ ಮೂಲ ಉದ್ದೇಶಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಲ್ಮಾನ್ ಖಾನ್ ಹಂಚಿಕೊಂಡಿರುವ ಈ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ವೈರಲ್ ಆಗಿದೆ. ಸಾವಿರಾರು ಮಂದಿ ಅದನ್ನು ಹಂಚಿಕೊಳ್ಳುವುದರ ಜೊತೆಗೆ, ವಿದ್ಯಾರ್ಥಿಗಳ ಹೋರಾಟ ಮತ್ತು ನಟನ ಹೇಳಿಕೆ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
Bangalore [Bangalore],Bangalore,Karnataka
Jul 22, 2026 11:33 PM IST














