Last Updated:
ಎರಡೂ ರಾಜ್ಯಗಳ ಎಲ್ಲಾ ಜಿಲ್ಲಾ ಕೇಂದ್ರಗಳು ಮತ್ತು ವಿಶ್ವವಿದ್ಯಾಲಯ ಕ್ಯಾಂಪಸ್‌ಗಳಲ್ಲಿ ರ್ಯಾಲಿಗಳು, ಧರಣಿಗಳು ಮತ್ತು ಪ್ರತಿಭಟನೆಗಳನ್ನು ಆಯೋಜಿಸಿದ್ದು, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಆಂಧ್ರಪ್ರದೇಶ (ಜು.24): ದೇಶದಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ (NEET Question Paper) ಹೋರಾಟ ಕಿಚ್ಚು ಜೋರಾಗಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಶಾಲೆ-ಕಾಲೇಜುಗಳನ್ನ ಬಂದ್ ಮಾಡಿ ಹೋರಾಟಕ್ಕೆ (Protest) ಬೆಂಬಲ ನೀಡಲಾಗ್ತಿದೆ. ಜೂನಿಯರ್ ಕಾಲೇಜುಗಳು, ಪದವಿ ಮತ್ತು ವೃತ್ತಿಪರ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳನ್ನು ಬಂದ್ (Bandh) ಮಾಡಲು ಹಲವಾರು ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳು ಕರೆ ನೀಡಿತ್ತು. ನೀಟ್ ಪರೀಕ್ಷೆಗಳ ವೈಫಲ್ಯ ಮತ್ತು ವಿದ್ಯಾರ್ಥಿಗಳ ಮೇಲಿನ ದಾಳಿಯನ್ನ ವಿರೋಧಿಸಿ ರಾಜ್ಯಾದ್ಯಂತ ಶಿಕ್ಷಣ ಸಂಸ್ಥೆಗಳ ಬಂದ್ ಮುಂದುವರೆದಿದೆ ಎಂದು ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ತಿಳಿಸಿವೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ದೇಶಾದ್ಯಂತ ಭಾರೀ ಕೋಲಾಹಲ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಸಂಘಗಳು ಹಲವಾರು ಪ್ರಮುಖ ಬೇಡಿಕೆಗಳೊಂದಿಗೆ ಪ್ರತಿಭಟನೆ ನಡೆಸಿದ್ದು, ನೈತಿಕ ಹೊಣೆಗಾರಿಕೆ ವಹಿಸಿಕೊಂಡು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಸಿಲುಕಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮತ್ತು ಯುವ ನಾಯಕರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮತ್ತು ಅಕ್ರಮ ಬಂಧನಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸುತ್ತಿದ್ದಾರೆ.
ಶಿಕ್ಷಣ ವ್ಯವಸ್ಥೆಯನ್ನು ಕೇಂದ್ರೀಕರಣಗೊಳಿಸುವ ನಿರ್ಧಾರಗಳನ್ನು ಹಿಂದಕ್ಕೆ ಪಡೆಯಬೇಕು ಮತ್ತು VVBSA ಮಸೂದೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಅವರು ಒತ್ತಾಯಿಸಿದರು. ಪ್ರಮುಖ ಎಡಪಂಥೀಯ ವಿದ್ಯಾರ್ಥಿ ಸಂಘಗಳಾದ SFI, AISF, PDSU, AISA, AIFDS, NSUI, DYFI, AIYF, AISB, AIPSU ಮತ್ತು ಇತರ ಸಂಘಟನೆಗಳು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಶಿಕ್ಷಣ ಸಂಸ್ಥೆಗಳ ಬಂದ್ ಕರೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ.
ಹೈದರಾಬಾದ್ ಸೇರಿದಂತೆ ಎರಡೂ ರಾಜ್ಯಗಳ ಎಲ್ಲಾ ಜಿಲ್ಲಾ ಕೇಂದ್ರಗಳು ಮತ್ತು ವಿಶ್ವವಿದ್ಯಾಲಯ ಕ್ಯಾಂಪಸ್‌ಗಳಲ್ಲಿ ರ್ಯಾಲಿಗಳು, ಧರಣಿಗಳು ಮತ್ತು ಪ್ರತಿಭಟನೆಗಳನ್ನು ಆಯೋಜಿಸಲು ವಿದ್ಯಾರ್ಥಿ ಮುಖಂಡರು ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ . ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು, ಶಿಕ್ಷಕರು ಮತ್ತು ಪೋಷಕರು ಈ ಬಂದ್‌ಗೆ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಎರಡೂ ರಾಜ್ಯಗಳ ಬಹುಪಾಲು ಖಾಸಗಿ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನ ಇಂದು ಮುಚ್ಚಲಾಗಿದೆ.














